ಮಂಗಳೂರು : ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸುವ “ಜನಮನ” ಕಾರ್ಯಕ್ರಮವು ಸೆಪ್ಟಂಬರ್ 15ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕೆಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ಸೋಮವಾರ ಸಂಜೆ ಸಕ್ರ್ಯುಟ್ ಹೌಸ್‍ನಲ್ಲಿ ಜನಮನ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಂಗಳೂರಿನ ಮಿಲಾಗ್ರಿಸ್ ಹಾಲ್‍ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಸಾಲ ಮನ್ನಾ, ಬಿದಾಯಿ ಯೋಜನೆ ಸೇರಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರಕಾರವು ಅನೇಕ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಸಾಧಕ-ಬಾಧಕಗಳ ಬಗ್ಗೆ ಹಾಗೂ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಆಯಾ ಯೋಜನೆಗಳ ಫಲಾನುಭವಿಗಳಿಂದಲೇ ನೇರವಾಗಿ ತಿಳಿದೊಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಇಲಾಖೆಗಳು ಜನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ನೇರವಾಗಿ ಸಂವಾದ ನಡೆಸಲಿದ್ದಾರೆ. ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಾರ್ತಾ ಇಲಾಖೆಯು ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದರು.
ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಮಾತನಾಡಿ, ಕಳೆದ ಜೂನ್ ತಿಂಗಳಲ್ಲಿ ಮೈಸೂರಿನಲ್ಲಿ ರಾಜ್ಯಮಟ್ಟದ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಇದೇ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಸಭೆಯಲ್ಲಿ ಶಾಸಕ ಜೆ.ಆರ್. ಲೋಬೋ, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ, ಅಪರ ಜಿಲ್ಲಾಧಿಕಾರಿ ಕುಮಾರ್ ಮತ್ತಿತರರು ಇದ್ದರು.