ಮಂಗಳೂರು :- ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಸರ್ಕಾರವು 2 ವರ್ಷ ದಾಟಿದ ಹಿನ್ನೆಲೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಸಾಧಕ ಬಾಧಕಗಳನ್ನು ಅರಿಯಲು ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ನೇರವಾಗಿ ಸಂವಾದ ನಡೆಸುವ “ಜನ ಮನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.
ಅವರು ಗುರುವಾರ ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಜನರಿಗೆ ನೀಡಿರುವ ಅನೇಕ ಜನಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳಿ0ದಲೇ ಅವರ ಅನುಭವವನ್ನು ಕೇಳುವ ಜನರ ಹಾಗೂ ಸರ್ಕಾರದ ನಡುವೆ ಸೇತುವೆಯ0ತೆ ಇರುವ ಜನಮನ ಕಾರ್ಯಕ್ರಮವಾಗಿದೆ. ವಾರ್ತಾ ಇಲಾಖೆಯು ಈ ಕಾರ್ಯಕ್ರಮ ಜಿಲ್ಲೆಯಲ್ಲಿ ಮು0ಬರುವ ದಿನಗಳಲ್ಲಿ ಹಮ್ಮಿಕೊಳ್ಳಲಿದ್ದು, ಇದರ ಯಶಸ್ಸಿಗೆ ಜಿಲ್ಲೆಯ ಎಲ್ಲಾ ಜನ ಕಲ್ಯಾಣ ಯೋಜನೆಗಳ ಅನುಷ್ಠಾನಾಧಿಕಾರಿಗಳು ಸಹಕರಿಸಿ ಕಾರ್ಯಕ್ರಮ ಯಶಸ್ಸಿಗೆ ಮು0ದಾಗಬೇಕೆ0ದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಉಚಿತ ಅಕ್ಕಿ ವಿತರಣೆ, ಶಾಲಾ ಮಕ್ಕಳಿಗೆ ಹಾಲು, ಹೈನುಗಾರರಿಗೆ ಸಬ್ಸಿಡಿ, 94 ಸಿ ಹಕ್ಕುಪತ್ರ ವಿತರಣೆ, ಯಶಸ್ವಿನಿ, ಮನಸ್ವಿನಿ ಯೋಜನೆ, ಸಾಲ ಮನ್ನಾ, ವಿದ್ಯಾಸಿರಿ, ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ವಿತರಣೆ ಸೇರಿದಂತೆ ಫಲಾನುಭವಿಗಳಿಗೆ ನೇರವಾಗಿ ತಲುಪುವ ಯೋಜನೆಗಳ ಫಲಾನುಭವಿಗಳೊಂದಿಗೆ ಉಸ್ತುವಾರಿ ಸಚಿವರು ಸಂವಾದ ನಡೆಸಿ ಅವರ ಅಭಿಪ್ರಾಯ ಹಾಗೂ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಸಲಹೆ ಆಲಿಸಲಿದ್ದಾರೆ. ಫಲಾನುಭವಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಎಲ್ಲಾ ಇಲಾಖೆಗಳು ಆಯ್ದ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಗೊಳಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ತಿಂಗಳಾಂತ್ಯಕ್ಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಅವರಿ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಮಾತನಾಡಿ, ಈಗಾಗಲೇ ಮೈಸೂರಿನಲ್ಲಿ ರಾಜ್ಯಮಟ್ಟದ ಜನ ಮನ ಕಾರ್ಯಕ್ರಮ ಜೂನ್ ತಿಂಗಳಲ್ಲಿ ನಡೆದಿದ್ದು, ಮುಖ್ಯಮಂತ್ರಿಗಳೇ ನೇರವಾಗಿ ಫಲಾನುಭವಿಗಳೊಂದಿಗೆ ಒಂದೇ ವೇದಿಕೆಯಲ್ಲಿ ಕುಳಿತು ಸಂವಾದ ನಡೆಸಿದ್ದಾರೆ. ಇದರ ಮುಂದುವರಿದ ಭಾಗವಾಗಿ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಫಲಾನುಭವಿಗಳ ಮುಕ್ತ ಸಂವಾದ ನಡೆಯಲಿದೆ. ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳ ಆಯ್ದ ಫಲಾನುಭವಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಡಿಡಿಪಿಐ ವಾಲ್ಟರ್ ಡಿಮೆಲ್ಲೋ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಆಹಾರ ಇಲಾಖೆ ಉಪನಿರ್ದೇಶಕ ಎಂ.ಆರ್.ಭಟ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಂತೋಷ್ ಕುಮಾರ್ ಮತ್ತಿತರರು ಇದ್ದರು.