ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ

Spread the love

ಮಂಗಳೂರು : ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವನ ಸೆರೆ, 6.7ಕೆಜಿ ಗಾಂಜಾ ವಶ

ಮಂಗಳೂರು: “ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರಕ್ಕೆ ಮಹಾರಾಷ್ಟ್ರದ ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿಕೊಂಡು ಮುಲ್ಕಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರುಮಂಗಳೂರು ನಗರದ ಮುಲ್ಕಿ ಬಪ್ಪನಾಡು ಪರಿಸರದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಉಡುಪಿ ಅಂಬಲಪಾಡಿ ನಿವಾಸಿ ಅಖಿಲೇಶ್ ಶೆಟ್ಟಿ (30) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ 1,62,000/- ರೂ ಮೌಲ್ಯದ 6.7 ಕೆಜಿ ನಿಷೇಧಿತ ಮಾದಕ ವಸ್ತು ಗಾಂಜಾ, ಮೊಬೈಲ್ ಫೋನ್, ನಗದು ಹಣ ರೂ. 660/- ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,63,000/-ಆಗಬಹುದು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಯು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಮುಂಬೈಯಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರಿಗೆ ರೈಲಿನಲ್ಲಿ ಬಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದನು. ಈತನು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಈತನ ವಿರುದ್ಧ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಪ್ರಕರಣ, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಉಡುಪಿ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣ ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.

ಈ ಮಾದಕ ವಸ್ತು ಗಾಂಜಾ ಮಾರಾಟದ ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ, ಎಎಸ್ಐಯವರಾದ ರಾಮ ಪೂಜಾರಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


Spread the love