ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು: ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಏರ್ ರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ಏಪ್ರಿಲ್ 29 ರಂದು ಇಮೇಲ್ ಸ್ವೀಕರಿಸಲಾಗಿದೆ. ಬಂದಿರುವ ಬೆದರಿಕೆಯ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.
ವಿಮಾನ ನಿಲ್ದಾಣದ ಮೂರು ಸ್ಥಳಗಳಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಲಾಗಿದೆ ಎಂದು ಇಮೇಲ್ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ. ಇಮೇಲ್‌ನ ಮೂಲದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.