Home Mangalorean News Kannada News ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಗೀತಾಂಜಲಿ ಸುವರ್ಣ

ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಗೀತಾಂಜಲಿ ಸುವರ್ಣ

Spread the love

ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ: ಗೀತಾಂಜಲಿ ಸುವರ್ಣ

ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ ದುರಾಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಮಹಿಳಾ ವಿರೋಧಿ ಧೋರಣೆಗಳು ಕಾಣಿಸುತ್ತವೆ. ಮಹಿಳಾ ವಿರೋಧಿ ಕಾಂಗ್ರೆಸ್ಸಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಳಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸಚಿವ ಪ್ರಿಯಾಂಕ್ ಖರ್ಗೆಯವರು ಹಿಂದೆಯೂ ಮಹಿಳೆಯರು ಸರಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದಿದ್ದರು. ಈ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದರು. ಇದೀಗ ಮಹಿಳೆಯರ ತಾಳಿ, ಕಾಲುಂಗುರ ತೆಗೆಸುವ ಕಾರ್ಯಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಕೈ ಹಾಕಿದೆ. ಇಂತಹ ಅವಮಾನಕ್ಕೆ ಮಹಿಳೆಯರು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವ ಮೂಲಕ ಸೂಕ್ತ ಉತ್ತರ ನೀಡಲಿದ್ದಾರೆ ಎಂದರು.

ಹಿಂದೂ ಧರ್ಮದ ಪ್ರಕಾರ ಮಹಿಳೆಯರಿಗೆ ಮಾಂಗಲ್ಯ ಮತ್ತು ಕಾಲುಂಗುರಗಳು ಅತ್ಯಂತ ಪವಿತ್ರವಾದ ವಸ್ತುಗಳು. ಅವುಗಳನ್ನು ಸಾಮಾನ್ಯವಾಗಿ ಮಹಿಳೆಯರು ವೈಧವ್ಯ ಬಂದಾಗ ಮತ್ತು ಸಂಪೂರ್ಣ ದೇಹದ ಸ್ಕ್ಯಾನಿಂಗ್ ಮಾಡಬೇಕಾದ ಸಂದರ್ಭದಲ್ಲಿ ಮಾತ್ರ ತೆಗೆಯುತ್ತಾರೆ. ಪರೀಕ್ಷೆ ಬರೆಯುವ ವೇಳೆ ಮಾಂಗಲ್ಯ ಮತ್ತು ಕಾಲುಂಗುರ ತೆಗೆಯುವಂತೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ದೇಶದ ಸಮಸ್ತ ಮಹಿಳೆಯರನ್ನು ಅವಮಾನಿಸಿದೆ. ಕಾಂಗ್ರೆಸ್ಸಿನ ಮಹಿಳಾ ವಿರೋಧಿ ಧೋರಣೆ ಮತ್ತೊಮ್ಮೆ ಅನಾವರಣಗೊಂಡಿದೆ ಎಂದರು.

ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವ ಕಾಂಗ್ರೆಸ್ ಸರಕಾರ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡುತ್ತಿದೆ. ಪರೀಕ್ಷೆಗೆ ಬಂದ ಹಿಂದೂ ಮಹಿಳೆಯರ ತಾಳಿ, ಕಾಲುಂಗುರ ತೆಗೆಸುತ್ತಾರೆ. ಹಿಂದುತ್ವ, ಹಿಂದೂ ಸಂಸ್ಕೃತಿಗೆ ಈ ಸರಕಾರ ಬೆಲೆ ಕೊಡುತ್ತಿಲ್ಲ. ಹಿಂದೂ ಮಹಿಳೆಯರ ಮಾಂಗಲ್ಯ ತೆಗೆಸುವ ದುಸ್ಸಾಹಸದಿಂದ ಈ ಸರಕಾರದ ಮನಸ್ಥಿತಿ ಯಾವ ಮಟ್ಟಕ್ಕೆ ಇಳಿದಿದೆ ಎಂಬುದು ಅರ್ಥವಾಗುತ್ತದೆ ಎಂದು ಅವರು ತಿಳಿಸಿದರು.

ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ, ನಗ್ನಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಖಂಡನೀಯ. ಇಂತಹ ಪ್ರಕರಣಗಳು ಕಾಂಗ್ರೆಸ್ ಆಡಳಿತದಲ್ಲಿ ಸಾಕಷ್ಟು ನಡೆದಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.


Spread the love

Exit mobile version