ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ಮಾಜಿ ಸಂಸದ ಕರಾವಳಿಯ ಪ್ರಭಾವಿ ರಾಜಕಾರಣಿ ಜಯಪ್ರಕಾಶ್ ಹೆಗ್ಡೆಯವರು ಬುಧವಾರ ಕಮಲ ಪಕ್ಷದ ಧ್ವಜವನ್ನು ಅಧಿಕೃತವಾಗಿ ಹಿಡಿಯುವುದರೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಬುಧವಾರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಯೂರಪ್ಪ ಅವರಿಂದ ಪಕ್ಷದ ಧ್ವಜವನ್ನು ಪಡೆಯುವುದರೊಂದಿಗೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಇದೇ ವೇಳೆ ಮೂಡಬಿದರೆಯ ಕಾಂಗ್ರೆಸ್ ನಾಯಕ ಮೇಘನಾಥ್ ಶೆಟ್ಟಿ, ಹೊಸಪೇಟೆಯ ಮಾಜಿ ಶಾಸಕ ರತನ್ ಸಿಂಗ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕಾರ್ಕಳ ಸುನಿಲ್ ಕುಮಾರ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆರ್. ಅಶೋಕ್, ವಿ ಸೋಮಣ್ಣ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.
ಬ್ರಹ್ಮಾವರ ಕ್ಷೇತ್ರ ದಿಂದ ಶಾಸಕರಾದ ಜಯಪ್ರಕಾಶ್ ಹೆಗ್ಡೆ ನಂತರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜನತಾ ಪರಿವಾರದ ಒಡಕಿನ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು. ಕ್ಷೇತ್ರ ಮರುವಿಂಗಡಣೆಯ ಬಳಿಕ ಬ್ರಹ್ಮಾವರ ಕ್ಷೇತ್ರ ವಿಲೀನ ಗೊಂಡಾಗ ಕಾಂಗ್ರೆಸ್ ಸೇರ್ಪಡೆಯಾದ ಹೆಗ್ಡೆ ಅವರು ಹುಟ್ಟೂರು ಕುಂದಾಪುರ ಕ್ಷೇತ್ರದಲ್ಲಿ ಅಭ್ಯರ್ಥಿಯಾದರು. ಕ್ಷೇತ್ರದ ಇನ್ನೋರ್ವ ಪ್ರಭಾವಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರೆದುರು ಸೋಲು ಅನುಭವಿಸಬೇಕಾಯಿತು. ಸಂಸದರಾಗಿದ್ದ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿ ಯಾದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಕಾರ್ಕಳ ಅವರ ವಿರುದ್ಧ ಜಯಭೇರಿ ಬಾರಿಸಿ ಸಂಸತ್ ಪ್ರವೇಶಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸೋಲು ಅನುಭವಿಸಿದ್ದರು.
ಪರಿಷತ್ ಚುನಾವಣೆಯ ವೇಳೆ ಕಾಂಗ್ರೆಸ್ ಪ್ರಭಾವಿ ಮುಖಂಡ ಪ್ರತಾಪ್ ಚಂದ್ರ ಶೆಟ್ಟರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಕ್ಷದಿಂದಲೇ ಅಮಾನತುಗೊಂಡಿದ್ದರು.