ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯ ಪ್ರಜೆ ಸೇರಿ ಇಬ್ಬರ ಸೆರೆ
ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ನೈಜೀರಿಯ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ದಸ್ತಗಿರಿ ಮಾಡಿ 200 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಇತ್ತೀಚೆಗೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಬಜ್ಪೆ ಪೊಲೀಸರು ದಸ್ತಗಿರಿ ಮಾಡಿದ್ದು, ಈ ಪ್ರಕರಣದಲ್ಲಿ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನ್ನು ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಗಳ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಮಂಗಳೂರಿನಿಂದ ಹಾಗೂ ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಆರೋಪಿಗಳಾದ ಬೆಂಗಳೂರು ಉತ್ತರ ಆಂದ್ರ ಹಳ್ಲೀ ನಿವಾಸಿ ದರ್ಶನ್.ಕೆ.ಜಿ(25), ಮತ್ತು ನೈಜಿರಿಯಾ ಪ್ರಜೆ ಚಿಕ ಜೊಸೇಫ್ ಇಝಿ (26) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ರೂ. 10,00,000/- ಮೌಲ್ಯದ 200 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮಾರುತಿ ಬಲೆನೋ ಕಾರು, 5 ಮೊಬೈಲ್ ಫೋನ್ ಗಳು, ವಿವಿಧ ಬ್ಯಾಂಕ್ ಗಳ 5 ಡೆಬಿಟ್ ಕಾರ್ಡ್ ಗಳು, 7 ಸಿಮ್ ಕಾರ್ಡ್ ಗಳು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 18,25,500/- ಆಗಬಹುದು. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಆರೋಪಿಗಳು ಬೆಂಗಳೂರಿನಲ್ಲಿದ್ದುಕೊಂಡು ಇನ್ನೋರ್ವ ಆರೋಪಿ ದರ್ಶನ್ ಎಂಬಾತನ ಜೊತೆ ಸೇರಿ ಮಂಗಳೂರಿನ ವಿವಿಧ ವ್ಯಕ್ತಿಗಳಿಗೆ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಎಂಡಿಎಂಎ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದರು. ಆರೋಪಿ ಚಿಕ ಜೋಸೆಫ್ ಇಝಿ ಎಂಬಾತನು 2023 ನೇ ಮೇ ತಿಂಗಳಲ್ಲಿ ಭಾರತಕ್ಕೆ ಉದ್ಯೋಗ ವೀಸಾದಲ್ಲಿ ಬಂದಿದ್ದನು. ಇಲ್ಲಿ ಬೆಂಗಳೂರಿನಲ್ಲಿ ಯಲಹಂಕದಲ್ಲಿ ನೈಜೀರಿಯ ಪ್ರಜೆಯ ಹೇರ್ ಕಟ್ಟಿಂಗ್ ಉದ್ಯೋಗ ಮಾಡುತ್ತಿದ್ದು, ಈ ಸಮಯದಲ್ಲಿ ಈತನ ವಿರುದ್ಧ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಮಯ ಈತನ ವಿರುದ್ಧ ಬೆಂಗಳೂರು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 4 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದನು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ ವಿ, ಎಎಸ್ಐ ರಾಮ ಪೂಜಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.