ಮಾದಕ ವ್ಯಸನ ವಿರೋಧಿ ಮಾಸಾಚರಣೆ ಮಾಹಿತಿ ಪುಸ್ತಕ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಆಯೋಜಿಸಿರುವ ಎರಡು ತಿಂಗಳುಗಳ ಕಾಲದ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಕಾರ್ಯಕ್ರಮದ ಕುರಿತು ಹೊರತರಲಿರುವ ಮಾಹಿತಿ ಪುಸ್ತಕವನ್ನು ಶುಕ್ರವಾರ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಕುಮಾರಸ್ವಾಮಿ ಪೊಲೀಸ್ ಇಲಾಖೆ ಮತ್ತು ಪತ್ರಕರ್ತರು ಜೊತೆಯಾಗಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾದುದು. ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಸರ್ವರೂ ಸಹಭಾಗಿಗಳಾಗಬೇಕು ಎಂದು ಶುಭ ಹಾರೈಸಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವೆ ಡಾ|ಜಯಮಾಲಾ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.