ಯು.ಟಿ. ಖಾದರ್ ಗೆ ಕೊಲೆ ಬೆದರಿಕೆ: ಸ್ವಯಂಪ್ರೇರಿತ ಕೇಸು ದಾಖಲಿಸಿ; ಹರೀಶ್ ಕುಮಾರ್
ಮಂಗಳೂರು: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ.ಖಾದರ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತರು ಎರಡು ವಾರದೊಳಗೆ ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್‌ಕುಮಾರ್ ಆಗ್ರಹಿಸಿದ್ದಾರೆ.
ಪ್ರಕರಣವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಆಯುಕ್ತರು ಪ್ರಕರಣದ ಬಗ್ಗೆ ಎರಡು ವಾರದೊಳಗೆ ಸ್ವಯಂಪ್ರೇರಿತ ದೂರು ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸರಕಾರದ ನೀತಿಯನ್ನು ವಿರೋಧಿಸಿದರೆ ನಾವು ದೇಶದ್ರೋಹಿಗಳಾಗುತ್ತೇವೆ. ಕೊಲೆ ಬೆದರಿಕೆ, ಕೈ- ಕಾಲು ಕಡಿಯುವ, ಕೊಲ್ಲುವ ಬೆದರಿಕೆ ಹಾಕುವವರನ್ನು ಏನು ಕರೆಯಬೇಕು ಎಂದು ಪ್ರಶ್ನಿಸಿದ ಅವರು, ಬಿಜೆಪಿ ಸರಕಾರದ ಅವಧಿಯಲ್ಲಿ ಪ್ರತಿಪಕ್ಷದ ನಾಯಕರಿಗೆ ಕೂಡ ಭದ್ರತೆ ಇಲ್ಲ ಎಂದು ಹರೀಶ್‌ಕುಮಾರ್ ಆರೋಪಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಮಿಥುನ್ ರೈ ಅವರಿಗೂ ಮುಂಬೈಯಿಂದ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಹರೀಶ್‌ಕುಮಾರ್ ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದರು.