ಲಕ್ಷದ್ವೀಪ ಪರಿಸರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆ, ಬಿರುಗಾಳಿ ಎಚ್ಚರಿಕೆ
ಉಡುಪಿ/ಮಂಗಳೂರು: ಪಶ್ಚಿಮ ಕರಾವಳಿ ಅರಬೀಸಮುದ್ರದ ಆಗ್ನೇಯ ಭಾಗದ ಲಕ್ಷದ್ವೀಪ ಪರಿಸರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮುಂದೆ ಇನ್ನಷ್ಟು ತೀವ್ರಗೊಂಡು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ದಕ್ಷಿಣಕನ್ನಡ, ಉಡುಪಿ ಜಿಲ್ಲೆಯಲ್ಲಿ ಮುಂದಿನ 24 ತಾಸುಗಳಲ್ಲಿ ವ್ಯಾಪಕ ಗಾಳಿ ಮಳೆಯಾಗುವ ಸಾಧ್ಯತೆಗಳಿವೆ.
ಮುಂಗಾರು ಆಗಮನಕ್ಕೆ ಪೂರ್ವ ಸಿದ್ಧತೆ ಎಂಬಂತೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ ದಿನಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಎಲ್ಲ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕರಾವಳಿಗೆ ಮುಂಗಾರು ಪ್ರವೇಶ ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಇಂತಹ ಸೂಚನೆ ನೀಡಿದೆ. ಆದರೆ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಮುಂದಿನ 24 ತಾಸುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಮಳೆಯಾಗಲಿದೆ. ನೆರೆಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಭಾರಿ ಗಾಳಿ ಮಳೆಯಾಗಲಿದೆ. ಅರಬ್ಬೀ ಸಮುದ್ರದಲ್ಲಿ ನಿಮ್ನ ಒತ್ತಡ ಜತೆಗೆ ಟ್ರಫ್ ಉಂಟಾಗಿರುವುದರಿಂದ ಸಮುದ್ರದ ಮೇಲ್ಮೈಯಿಂದ ಬಲವಾದ ಗಾಳಿ ಬೀಸಲಿದೆ.
ಗಂಟೆಗೆ 35-45ಕಿ.ಮೀ. ವೇಗದ ಬಿರುಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ತಿರುವನಂತಪುರನ ಹವಾಮಾನ ಕೇಂದ್ರದ ಸೈಕ್ಲಾನ್ ವಾರ್ನಿಂಗ್ ಸೆಂಟರ್ ಎಚ್ಚರಿಕೆ ನೀಡಿದೆ.ಇದರಿಂದ ಕೇರಳ ಮತ್ತು ಕರ್ನಾಟಕ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಗಾಳಿಯ ವೇಗವು ಗಂಟೆಗೆ 90-ರಿಂದ 100ಕಿ.ಮೀ. ದಾಟುವ ಸಾಧ್ಯತೆ ಇದ್ದು, ಇದರ ಪರಿಣಾಮ ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.