ಮಂಗಳೂರು: ನಗರದ ಬೆಸೆಂಟ್ ಕಾಲೇಜಿನ ಬಳಿಯಲ್ಲಿ ವಿನಾಯಕ ಪಾಂಡುರಂಗ ಬಾಳಿಗ ಎಂಬವರ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಇನ್ನೋರ್ವ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತನನ್ನು ಶೈಲೇಶ್ ಯಾನೆ ಶೈಲು (40) ಎಂದು ಗುರುತಿಸಲಾಗಿದ್ದು, ಮಂಗಳೂರು ಹೊರವಲಯದಲ್ಲಿ ಬಂಧಿಸಲಾಗಿದೆ.
ಮಾರ್ಚ್ 21 ರಂದು ವಿನಾಯಕ ಪಾಂಡುರಂಗ ಬಾಳಿಗರವರು ಪ್ರತೀ ದಿನದಂತೆ ಬೆಳಿಗ್ಗೆ 05-45 ಗಂಟೆಗೆ ವೆಂಕಟರಮಣ ದೇವಸ್ಥಾನಕ್ಕೆ ಹೋಗಲು ತನ್ನ ಬಾಬ್ತು ಸ್ಕೂಟರ್ ಹೋಂಡಾ ಪ್ಲೆಸರ್ ಕೆ.ಎ.19.ಇ.ಡಿ 3098 ರಲ್ಲಿ ಮನೆಯಿಂದ ಹೊರಟು ಸುಮಾರು 75 ಮೀಟರ್ ದೂರ ಹೋಗುವಷ್ಟರಲ್ಲಿ ವಿನಾಯಕ ಪಾಂಡುರಂಗ ಬಾಳಿಗರನ್ನು ತಡೆದು ನಿಲ್ಲಿಸಿದ ಮೂವರು ವ್ಯಕ್ತಿಗಳು ಯದ್ವಾತದ್ವಾ ತಲವಾರಿನಿಂದ ಕಡಿದು ಅವರು ಬಂದ ಬೈಕ್ ನಲ್ಲಿ ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ವಿನಾಯಕ ಪಾಂಡುರಂಗ ಬಾಳಿಗರನ್ನು ಜ್ಯೋತಿಯ ಕೆ.ಎಂ.ಸಿ ಆಸ್ಪತ್ರೆಗೆ 06-05 ಗಂಟೆಗೆ ಚಿಕಿತ್ಸೆಗೆಂದು ತಲುಪಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ವಿನಾಯಕ ಪಾಂಡುರಂಗ ಬಾಳಿಗರವರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ವಿನಾಯಕ ಪಾಂಡುರಂಗ ಬಾಳಿಗರವರ ತಂಗಿಯಾದ ಅನುರಾಧ ಬಾಳಿಗರವರು ನೀಡಿದ ಪಿರ್ಯಾದಿನಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿನಿತ್ ಪೂಜಾರಿ, ನಿಶಿತ್ ದೇವಾಡಿಗ ಮತ್ತು ಶಿವ @ ಶಿವಪ್ರಸಾದ್ ಎಂಬವರನ್ನು ದಸ್ತಗಿರಿ ಮಾಡಲಾಗಿರುತ್ತದೆ. ಈ ಪ್ರಕರಣದಲ್ಲಿ ಭಾಗಿಯಾದ ಉಳಿದ ಆರೋಪಿಗಳ ಮಾಹಿತಿ ದೊರೆತಿದ್ದು, ಅವರ ಪತ್ತೆ ಕಾರ್ಯ ಜ್ಯಾರಿಯಲ್ಲಿದೆ. ಸಿ.ಸಿ.ಬಿ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.