Home Mangalorean News Kannada News ಶಿವಮೊಗ್ಗ ಉಪಚುನಾವಣೆ; ಎರಡು ಜಿಲ್ಲೆಗಳು ಸಮನ್ವಯದಿಂದ ಕಾರ್ಯ ನಿರ್ವಹಣೆ: ಕೆ.ಎಸ್.ದಯಾನಂದ್

ಶಿವಮೊಗ್ಗ ಉಪಚುನಾವಣೆ; ಎರಡು ಜಿಲ್ಲೆಗಳು ಸಮನ್ವಯದಿಂದ ಕಾರ್ಯ ನಿರ್ವಹಣೆ: ಕೆ.ಎಸ್.ದಯಾನಂದ್

Spread the love

ಶಿವಮೊಗ್ಗ ಉಪಚುನಾವಣೆ; ಎರಡು ಜಿಲ್ಲೆಗಳು ಸಮನ್ವಯದಿಂದ ಕಾರ್ಯ ನಿರ್ವಹಣೆ: ಕೆ.ಎಸ್.ದಯಾನಂದ್

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ಬರುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು ಉಡುಪಿ ಜಿಲ್ಲಾಡಳಿತ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ದಯಾನಂದ ಅವರು ತಿಳಿಸಿದರು.

ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎರಡು ಜಿಲ್ಲೆಗಳ ಹಿರಿಯ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿ ನಿಯೋಜನೆ, ತರಬೇತಿ, ಸೂಕ್ತ ಪೊಲೀಸ್ ಬಂದೋಬಸ್ತ್ ಸಿದ್ಧತೆ, ಮತಗಟ್ಟೆಗಳ ಪರಿಶೀಲನೆ, ಮತದಾರರ ಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳನ್ನು ನಿಯಮಾನುಸಾರ ನಡೆಸಲಾಗುತ್ತಿದೆ. ಚುನಾವಣಾ ಅಕ್ರಮಗಳ ತಡೆಗೆ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ನೆರೆಯ ಉಡುಪಿ ಜಿಲ್ಲಾಡಳಿತದೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಬೈಂದೂರು ವಿಧಾನಸಭಾ ವ್ಯಾಪ್ತಿಗೆ ಸಂಬಂಧಿಸಿದಂತೆ ಈಗಾಗಲೇ ರಾಜಕೀಯ ಪಕ್ಷಗಳ ಸಭೆಯನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಫ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೇಲೆನ್ಸ್ ತಂಡ, ಸೆಕ್ಟರ್ ಅಧಿಕಾರಿಗಳು ಮೀಡಿಯಾ ಮಾನಿಟರಿಂಗ್ ತಂಡ ಸೇರಿದಂತೆ ಎಲ್ಲಾ ತಂಡಗಳನ್ನು ರಚಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಸಭೆಗೆ ಮಾಹಿತಿ ನೀಡಿದರು.

ಬೈಂದೂರು ವಲಯದಲ್ಲಿ 19 ನಕ್ಸಲ್ ಪೀಡಿತ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಸುಗಮ ಚುನಾವಣೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತದಾನದ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗೆ ಯೋಜನೆ ರೂಪಿಸಲಾಗುತ್ತಿದೆ. ಮತದಾರರ ಮೇಲೆ ಒತ್ತಡ ಬೀರುವಂತಹ ಶಕ್ತಿಗಳನ್ನು ಗುರುತಿಸಲಾಗಿದ್ದು, ಅಂತಹ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿ ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರ್ಗಿ ಅವರು ತಿಳಿಸಿದರು.

ಚುನಾವಣಾ ಪೊಲೀಸ್ ವೀಕ್ಷಕ ಸೊಲೊಮನ್ ಯಶು ಕುಮಾರ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತು ಕಲ್ಪಿಸುವ ಕುರಿತಾಗಿ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಬೇಕು. ಎರಡು ಜಿಲ್ಲೆಗಳ ಪೊಲೀಸ್ ವರಿಷ್ಟಾಧಿಕಾರಿಗಳು ನಿರಂತರ ಸಂಪರ್ಕ ಹೊಂದಿರಬೇಕು. ಪರವಾನಿಗೆ ಹೊಂದಿರುವ ಎಲ್ಲಾ ಆಯುಧಗಳನ್ನು ಕಡ್ಡಾಯವಾಗಿ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇರಿಸಬೇಕು. ಬಾಕಿ ಇರುವ ಎಲ್ಲಾ ಜಾಮೀನು ರಹಿತ ವಾರೆಂಟ್ಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಚುನಾವಣಾ ವೀಕ್ಷಕ ಸಂಜಯ್ ಕುಮಾರ್ ರಾಕೇಶ್, ವೆಚ್ಚ ವೀಕ್ಷಕ ವಿಜಯ್ ಕೊಠಾರಿ, ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ನಾಗೇಂದ್ರ ಹೊನ್ನಾಳಿ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version