ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಆರೋಪಿ ಸೆರೆ
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಗೋವಾದಿಂದ ನಗರ ಹಾಗೂ ಕೇರಳಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೇರಳದ ಕಲ್ಲಿಕ್ಕೋಟೆಯ ಕಂದಲಾಡ್ ಗ್ರಾಮದ ಶಮೀರ್ ಪಿ.ಕೆ. (42) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಮುಲ್ಕಿ ಸಮೀಪದ ಬಪ್ಪನಾಡು ಬಳಿ ಕಾರನ್ನು ತಡೆದು ಪರಿಶೀಲಿಸಿದ ಪೊಲೀಸರು 738 ಗ್ರಾಂ ಹೈಡ್ರೋವಿಡ್ ಗಾಂಜಾವನ್ನು ಪತ್ತೆ ಹಚ್ಚಿದರು. ಅಲ್ಲದೆ ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ವಶಪಡಿಸಿಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 80,10,000 ರೂ.ಆಗಬಹುದು ಎಂದು ಅಂದಾಜಿಸಲಾಗಿದೆ.
ಈ ಹೈಡ್ರೋವಿಡ್ ಗಾಂಜಾವನ್ನು ವಿದೇಶದಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ, ಎಸ್ಸೈ ಶರಣಪ್ಪಭಂಡಾರಿ ಮತ್ತಿತರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.