ಸೈಂಟ್ ಆಗ್ನೆಸ್ ಕಾಲೇಜಿನ ಸ್ಕಾರ್ಫ್ ವಿವಾದ ಕುರಿತು ಸೂಕ್ತ ಕ್ರಮಕ್ಕಾಗಿ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ; ಸಚಿವ ಖಾದರ್
ಮಂಗಳೂರು: ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ನಡೆಯುತ್ತಿರುವ ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಖಾದರ್, ಸಂತ ಅಗ್ನೆಸ್ ಕಾಲೇಜು 97 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಸಾವಿರಾರು ವಿದ್ಯಾರ್ಥಿಗಳು ಅಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಸೈಂಟ್ ಆಗ್ನೆಸ್ ಕಾಲೇಜು ದೇಶ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಸರುಗಳಿಸಿದ ಶಿಕ್ಷಣ ಸಂಸ್ಥೆಯಾಗಿದೆ. ಸ್ಕಾರ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿಗೆ ಸಂಬಂಧಪಡದ ಹೊರಗಿನ ಸಂಘಟನೆಗಳು ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಆ ಸಂಸ್ಥೆಗೆ ಕಳಂಕ ತರುವ ಅಗತ್ಯವೂ ಇಲ್ಲ. ಅದನ್ನು ಕಾಲೇಜಿನ ಆಡಳಿತ ಮಂಡಳಿ, ವಿದ್ಯಾರ್ಥಿನಿಯರು ಮತ್ತು ಹೆತ್ತವರು ಬಗೆಹರಿಸಬೇಕಿದೆ ಎಂದು ಖಾದರ್ ತಿಳಿಸಿದರು.
ಇದೊಂದು ಸೂಕ್ಷ್ಮ ವಿಚಾರವಾಗಿದೆ. ವಿವಾದ ಭುಗಿಲೇಳುವ ಮುನ್ನ ಸಂಬಂಧಪಟ್ಟವರನ್ನು ಕರೆಸಿ ಸೂಕ್ತ ರೀತಿಯಲ್ಲಿ ಮಾತುಕತೆ ನಡೆಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ. ಈ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಅಧಿಕಾರವಿಲ್ಲ ನಾನು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬಹುದಷ್ಟೇ. ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಕಾಲೇಜು ಆಡಳಿತ ಮಂಡಳಿಯ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಪರಿಹಾರಮಾಡಬೇಕು ಎಂದರು.
ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೋ ಬೇಡವೋ ಎಂಬುದನ್ನು ಜಿಲ್ಲಾಡಳಿತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಖಾದರ್ ಹೇಳಿದರು.