ಜಾನುವಾರು ಸಾಗಾಣಿಕೆ  ಸಂದರ್ಭ ಕಾನೂನನ್ನು ಕೈಗೆತ್ತಿಕೊಂಡಲ್ಲಿ   ಕಠಿಣ ಕ್ರಮ – ಡಿ.ಸಿ ಹೆಪ್ಸಿಬಾರಾಣಿ ಕೊರ್ಲಪಾಟಿ

Spread the love

ಜಾನುವಾರು ಸಾಗಾಣಿಕೆ  ಸಂದರ್ಭ ಕಾನೂನನ್ನು ಕೈಗೆತ್ತಿಕೊಂಡಲ್ಲಿ   ಕಠಿಣ ಕ್ರಮ – ಡಿ.ಸಿ ಹೆಪ್ಸಿಬಾರಾಣಿ ಕೊರ್ಲಪಾಟಿ

ಉಡುಪಿ: ಸರ್ಕಾರದ ಆದೇಶದಂತೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಪ್ರಾಣಿಗಳ ಅನಧಿಕೃತ ಸಾಗಾಣಿಕೆ ಹಾಗೂ ವಧೆ ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು.

ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ/ವಧೆ ಮಾಡುವಂತಿಲ್ಲ, ಕಾನೂನನ್ನು ಉಲ್ಲಂಘಿಸಿ ಅಕ್ರಮವಾಗಿ ಅಥವಾ ಅನಧಿಕೃತವಾಗಿ ಪ್ರಾಣಿಗಳನ್ನು ಸಾಗಾಣಿಕೆ ಮಾಡುತ್ತಿದ್ದಲ್ಲಿ ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಳ್ಳುವಂತಿಲ್ಲ. ಈ ಬಗ್ಗೆ ಸಂಬಂಧಿಸಿದ ಹತ್ತಿರದ ಪೋಲೀಸ್ ಠಾಣೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಅಥವಾ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ತಿಳಿಸಬೇಕು. ಒಂದು ವೇಳೆ ಸಾರ್ವಜನಿಕರು ತಾವೇ ಕಾನೂನನ್ನು ಕೈಗೆತ್ತಿಕೊಂಡಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದರು.

ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ, ಸ್ಥಳೀಯ ಸಂಸ್ಥೆಗಳ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವಂತೆ ಸೂಚಿಸಿದರು.

ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಲು ಹತ್ತಿರದ ಗೋಶಾಲೆಗೆ ಬಿಡಲು ಹತ್ತಿರದ ಗೋಶಾಲೆಗಳನ್ನು ಗುರುತಿಸುವಂತೆ ಪೋಲೀಸ್ ಇಲಾಖೆಗೆ ಸೂಚಿಸಿದರು. ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಲು ಪಶು ಚಿಕಿತ್ಸಾಲಯದ ಪಶುವೈದ್ಯಾಧಿಕಾರಿಗೆ ನಿರ್ದೇಶನ ನೀಡುವಂತೆ ಪಶುಸಂಗೋಪನಾ ಇಲಾಖೆಗೆ ಸೂಚಿಸಿದರು ಹಾಗೂ ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ತಹಶೀಲ್ದಾರರು ಅಗತ್ಯವಿದ್ದಲ್ಲಿ ಶಾಂತಿ ಸಭೆಗಳನ್ನು ನಡೆಸುವುದು. ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ಆಚರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಮತ್ತು ಮೇಲುಸ್ತುವಾರಿ ವಹಿಸುವಂತೆ ನಿರ್ದೇಶನ ನೀಡಿದರು.

ಉಡುಪಿ ಪೋಲಿಸ್ ಅಧೀಕ್ಷಕರು ಜಿಲ್ಲಾದ್ಯಾಂತ 30 ಸಂಖ್ಯೆ ರಾತ್ರಿ ತಪಾಸಣಾ ಕೇಂದ್ರ, ಹಾಗೂ ದಿನದ ಸಮಯದಲ್ಲಿ 10 ಸಂಖ್ಯೆ ತಪಾಸಣಾ ಕೇಂದ್ರಗಳಿದ್ದು, ಸದ್ರಿ ಕೇಂದ್ರಗಳಿಗೆ ಈ ಬಗ್ಗೆ ಹೆಚ್ಚಿನ ಜಾಗರೂಕತೆ ಇರುವಂತೆ ಸೂಚನೆ ನೀಡಲಾಗಿದೆ. ಸಬ್ ಡಿವಿಜನ್ ಮಟ್ಟದಲ್ಲಿ ಪಿ.ಎಸ್.ಐ ಯನ್ನೊಳಗೊಂಡ ವಿಶೇಷ ತಪಾಸಣಾ ತಂಡವೂ ಸಹ ಈ ಬಗ್ಗೆ ನಿಗವಹಿಸಲಿದೆ. ಸಿ.ಆರ್.ಪಿ.ಸಿ ಸೆಕ್ಷನ್ 107 ರೀತ್ಯಾ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಬಂಧಕ ಕೇಸ್ಗಳನ್ನು ದಾಖಲಿಸಲಾಗಿದೆ. ಹಳೆಯ ಅರೋಪಿಗಳನ್ನು ಈಗಾಗಲೇ ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಲಾಗಿದೆ ಅಲ್ಲದೆ ಅಂತವರುಗಳ ಮೇಲೆ ನಿಗಾವಹಿಸಲಾಗಿದೆ ಎಂದು ತಿಳಿಸಿದರು. ಠಾಣಾ ವ್ಯಾಪ್ತಿಯಲ್ಲಿ ಧಾರ್ಮಿಕ ಮುಖಂಡರೊಡನೆ ಸ್ನೇಹ ಸೌಹಾರ್ದ ಸಭೆಗಳನ್ನು ಮಾಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಎಲ್ಲಾ ನಿರ್ದೇಶನಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿಯೂ ಅಗತ್ಯ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love