ಜಿಲ್ಲಾ ಉಸ್ತುವಾರಿ ಸಚಿವರಿಂದ ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ : ವೀಣಾ ಶೆಟ್ಟಿ

Spread the love

ಜಿಲ್ಲಾ ಉಸ್ತುವಾರಿ ಸಚಿವರಿಂದ ಉಡುಪಿ ಜಿಲ್ಲೆಯ ಸಂಪೂರ್ಣ ಕಡೆಗಣನೆ : ವೀಣಾ ಶೆಟ್ಟಿ

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿ ಜಿಲ್ಲೆಗೆ ಭೇಟಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ವೀಣಾ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಜಿಲ್ಲಾ ಮಟ್ಟದ ಸ್ವಾತಂತ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಮಾತ್ರ ಸೀಮಿತವಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಆಸಕ್ತಿ ತೋರುತ್ತಿಲ್ಲ.

ಜಿಲ್ಲೆಯಲ್ಲಿ ನಗರ ಸಭೆ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳೇ ಅಧಿಕಾರ ನಡೆಸುತ್ತಿದ್ದು ಜನಸಾಮಾನ್ಯರ ದೈನಂದಿನ ಸಮಸ್ಯಗೆ ಅಧಿಕಾರಿಗಳು ಸ್ಪಂದನೆ ನೀಡುತ್ತಿಲ್ಲ.

ರಾಜ್ಯ ಸರ್ಕಾರ ಘೋಷಿಸಿರುವ ತಮ್ಮದೇ ಇಲಾಖೆಯ ಗೃಹ ಲಕ್ಷ್ಮೀ ಯೋಜನೆಯಿಂದ ಜಿಲ್ಲೆಯ ಬಹುಪಾಲು ಮಹಿಳೆಯರು ವಂಚಿತರಾಗಿದ್ದಾರೆ. ನಗರ ಸಭೆ ಸಹಿತ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದು, ವ್ಯಾಪಕ ಭ್ರಷ್ಟಾಚಾರ, ಕಳಪೆ ಕಾಮಗಾರಿಗಳಿಂದ ಜನರು ಬೇಸತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಎಲ್ಲಾ ಸರಕಾರದ ಅವಧಿಯಲ್ಲಿ ವಿಶೇಷ ಅನುದಾನ ಮಂಜೂರು ಮಾಡಿದೆ ., ಈ ಬಾರಿ ಮಾತ್ರ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಮಂಜೂರು ಮಾಡಿಸುವಲ್ಲಿಯೂ ಸಚಿವರು ವಿಫಲರಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರೂ ಕೂಡಲೇ ಜಿಲ್ಲೆಗೆ ಆಗಮಿಸಿ ಜಿಲ್ಲಾಡಳಿತಕ್ಕೆ ಚುರುಕು ಮುಟ್ಟಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಕ್ರಮ ವಹಿಸಬೇಕು, ತಪ್ಪಿದ್ದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸಚಿವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


Spread the love