ಡಿ.ಕೆ.ಶಿವಕುಮಾರ್‌ ನಿವಾಸದ ಮೇಲೆ ಐಟಿ ದಾಳಿ

Spread the love

ಡಿ.ಕೆ.ಶಿವಕುಮಾರ್‌ ನಿವಾಸದ ಮೇಲೆ ಐಟಿ ದಾಳಿ

ನವದೆಹಲಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರ ದೆಹಲಿ ನಿವಾಸದ ಮೇಲೂ ಐಟಿ ದಾಳಿ ನಡೆದಿದ್ದು ಕೋಟ್ಯಾಂತರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ದೆಹಲಿಯ ಸಪ್ದರ್‌ಜಂಗ್ ಪ್ರದೇಶದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಬೆಳಗ್ಗೆ 8 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ದಾಖಲೆ ಪತ್ರಗಳ ಜತೆಗೆ ಕೋಟ್ಯಾಂತರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಶಿವಕುಮಾರ್‌ ಅವರ ಆಪ್ತಸಹಾಯಕ ಆಂಜನೇಯ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಕಾಗದ ಪತ್ರಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್ ಕಾಂಗ್ರೆಸ್ ಶಾಸಕರು ಉಳಿದುಕೊಂಡಿರುವ ಈಗಲ್ ಟನ್ ರೆಸಾರ್ಟ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಬುಧವಾರ ಐಟಿ ದಾಳಿ ನಡೆದಿದೆ.

ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಲ್ ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿ ಕಾಗದ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಐಟಿ ಅಧಿಕಾರಿಗಳ ಮತ್ತೊಂದು ತಂಡ ಕನಕಪುರದಲ್ಲಿರುವ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಂಸದ ಸುರೇಶ್, ಎಂಎಲ್‌ಸಿ ರವಿ ಅವರ ಮನೆಯ ಮೇಲೂ ದಾಳಿ ನಡೆದಿದೆ. ಒಟ್ಟು ಇಪ್ಪತ್ತು ಅಧಿಕಾರಿಗಳ ತಂಡ ಕನಕಪುರ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.

 


Spread the love