ದಕ ಜಿಲ್ಲೆಯಲ್ಲಿ ನಿರಂತರ ಮಳೆ – ಜು 23 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

Spread the love

ದಕ ಜಿಲ್ಲೆಯಲ್ಲಿ ನಿರಂತರ ಮಳೆ – ಜು 23 ರಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ (ಪಿಯುವರೆಗೆ) ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಜು.25ರವರೆಗೆ ಪ್ರತಿದಿನ 200 ಮಿ.ಮೀ. ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಮುಂಜಾಗ್ರತೆ ವಹಿಸಬೇಕು. ಮೀನುಗಾರಿಕೆಗೆ ಈ ದಿನದಂದು ಮೀನುಗಾರರು ತೆರಳಬಾರದು. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು.

ಪ್ರವಾಸಿಗರು/ ಸಾರ್ವಜನಿಕರು ನದಿತೀರ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಟೋಲ್ಫ್ರೀ ನಂ. 1077 ಅಥವಾ ವಾಟ್ಸ್ ಆಪ್ ನಂಬರ್ 9483908000ನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.


Spread the love