ಫೆಂಗಲ್ ಚಂಡಮಾರುತದ ಹಿನ್ನೆಲೆ – ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಭಾರೀ ಮಳೆಯಿಂದ ಎದುರಾಗಬಹುದಾದ ಪರಿಸ್ಥಿತಿಗಳನ್ನ ನಿರ್ವಹಿಸಲು ಎಲ್ಲ ರೀತಿಯಲ್ಲಿ ಸಜ್ಜಾಗಿರುವಂತೆ ದೂರವಾಣಿ ಮೂಲಕ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ ಎಂದು ಈ ವೇಳೆ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಸಚಿವರಿಗೆ ಮಾಹಿತಿ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ಡಿಸೆಂಬರ್ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದರು.