ಬಜೆಟ್ ಮೀನುಗಾರಿಕಾ ಅಭಿವೃದ್ಧಿಗೆ ಪೂರಕ – ಯಶ್ಪಾಲ್ ಸುವರ್ಣ
ಉಡುಪಿ: ಮುಖ್ಯಮಂತ್ರಿ ಯಡ್ಯೂರಪ್ಪ ಗುರುವಾರ ಮಂಡಿಸಿದ ಬಜೆಟ್ ಮೀನುಗಾರಿಕಾ ಅಭಿವೃದ್ಧಿಗೆ ಪೂರಕವಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ.
ಕರಾವಳಿ ಕರ್ನಾಟಕದ ಪ್ರಮುಖ ಮೀನುಗಾರಿಕಾ ಬಂದರುಗಳಾದ ಹೆಜಮಾಡಿ, ಹಂಗಾರಕಟ್ಟೆ, ಮರವಂತೆ, ತೆಂಗಿನಗುಂಡಿ, ಕಾರವಾರ ಬಂದರುಗಳ ಅಭಿವೃದ್ಧಿಗೆ ಸುಮಾರು 407 ಕೋಟಿ ಅನುದಾನವನ್ನು ಬಜೆಟ್ನಲ್ಲಿ ಮೀಸಲಿಡುವ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಲು ಸರಕಾರ ಮುಂದಾಗಿದೆ.
ಮೀನುಗಾರಿಕೆಯಲ್ಲಿ ತಾಂತ್ರಿಕತೆ ಅಳವಡಿಕೆಗೆ ಉತ್ತೇಜನಕ್ಕಾಗಿ ಕರ್ನಾಟಕ ಮತ್ಸ್ಯ ವಿಕಾಸ ಯೋಜನೆಯಡಿ 1.5 ಕೋಟಿ ಹಾಗೂ ಮಹಿಳಾ ಮೀನುಗಾರರ ಸಬಲೀಕರಣ ನಿಟ್ಟಿನಲ್ಲಿ 1 ಸಾವಿರ ಮಹಿಳೆಯರಿಗೆ ದ್ವಿಚಕ್ರ ವಾಹನ ಖರೀದಿಗೆ 5 ಕೋಟಿ ಅನುದಾನ ಹಾಗೂ ಕುಳಾಯಿ ಬಂದರಿನಲ್ಲಿ 12.5 ಕೋಟಿ ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆಗೆ ಮುಂದಾಗುವ ಮೂಲಕ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಮುಂದಡಿಯಿಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.