ಉಡುಪಿ: ಜಿಲ್ಲೆಯಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಶನಿವಾರ ಉಡುಪಿ ತಾಲೂಕು ಪಂಚಾಯತ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಉಡುಪಿ, ಪ್ರಾಥಮಿಕ ಮತ್ತು ಫ್ರೌಡಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಸಹಯೋಗದಲ್ಲಿ, ಶಾಲೆ ಕಡೆ ನನ್ನ ನಡೆ, ಶಿಕ್ಷಣ ನನ್ನ ಮೂಲಭೂತ ಹಕ್ಕು , ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ತರುವ ಕುರಿತು , ಏಕಕಾಲಕ್ಕೆ ರಾಜ್ಯದ 30 ಜಿಲ್ಲೆಗಳಲ್ಲಿ ಬೃಹತ್ ಜಾಗೃತಿ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯು ಶೈಕ್ಷಣಿಕವಾಗಿ ಇಡೀ ರಾಜ್ಯದಲ್ಲಿ ಮುಂಚೂಣಿಯಲ್ಲಿದ್ದು, 87% ಸಾಕ್ಷರತಾ ಪ್ರಮಾಣ ಇದೆ, ಶಿಕ್ಷಣ ಮೂಲಭೂತ ಹಕ್ಕು ಆಗಿದ್ದು, ವಲಸೆ ಕಾರ್ಮಿಕರ ಮಕ್ಕಳು ಮತ್ತು ಬಾಲ ಕಾರ್ಮಿಕರು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಅಂತಹ ಮಕ್ಕಳನ್ನು ಗುರುತಿಸಿ ಅವರಿಗೆ ಕಡ್ಡಾಯ ಶಿಕ್ಷಣ ನೀಡಬೇಕು, ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು, ಈ ಕಾರ್ಯದಲ್ಲಿ ಎಲ್ಲಾ ಇಲಾಖೆಗಳು , ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಾ ಸಂಘಟನೆಗಳು ಪ್ರಯತ್ನಿಸಬೇಕು ಎಂದು ಸಚಿವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ಶಿಕ್ಷಣ ಇಲಾಖೆಯ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 50 ರಿಂದ 60 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಆದರೆ ಈಗ ನಡೆಯುವ ಅಭಿಯಾನದಲ್ಲಿ ನಿಖರವಾದ ಸಂಖ್ಯೆ ತಿಳಿಯಲಿದ್ದು, ಇಂದಿನಿಂದ ಮೇ 23 ರ ವರೆಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಯಲಿದ್ದು, ನಂತರ ಆ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಕ್ರಿಯೆ ನಡೆಯಲಿದೆ, ಜಿಲ್ಲೆಯಲ್ಲಿ ಈ ಅಭಿಯಾನ ಕಾರ್ಯಕ್ರಮಕ್ಕೆ ಎಲ್ಲಾ ಸ್ವಯಂ ಸೇವಾ ಸಂಘಟನೆಗಳು, ಎಸ್.ಡಿ.ಎಂ.ಸಿ ಗಳು ಸಹಕಾರ ನೀಡುತ್ತಿದ್ದು, ಸಾರ್ವಜನಿಕರು ತಮ್ಮ ಅಕ್ಕ ಪಕ್ಕದ ಮನೆಗಳಲ್ಲಿ ಶಾಲೆಗೆ ಹೋಗದ ಮಕ್ಕಳಿದ್ದಲ್ಲಿ ಮಾಹಿತಿಯನ್ನು ನೀಡುವಂತೆ ತಿಳಿಸಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ್ ಮಾತನಾಡಿ, ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಮಕ್ಕಳು ಶಾಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೊರಗುಳಿದಿದ್ದು, ಕೆಲವರು ಭಿಕ್ಷಾಟನೆ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದು ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನ ವಿವಿಧ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ಕೈಪಿಡಿಯನ್ನು ಸಚಿವರು ಬಿಡುಗಡೆಗೊಳಿಸಿದರು.
ಜಿ.ಪಂ. ಸದಸ್ಯ ಜನಾರ್ಧನ ತೋನ್ಸೆ, ಜಿ.ಪಂ. ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್ , ಡಿಡಿಪಿಐ ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶೇಷಪ್ಪ ಸ್ವಾಗತಿಸಿದರು, ಪಿಡಿಓ ಮಹೇಶ್ ನಿರೂಪಿಸಿ, ವಂದಿಸಿದರು.
ಪಂಚಾಯತ್ ರಾಜ್ ದಿವಸ್- ಉಪಗ್ರಹ ಆಧಾರಿತ ಸಂವಾದ ಕಾರ್ಯಕ್ರಮ
ಪಂಚಾಯತ್ ರಾಜ್ ದಿವಸ್ ಆಚರಣೆ ಪ್ರಯುಕ್ತ, ಗ್ರಾಮ ಪಂಚಾಯತ್ ಸದಸ್ಯರನ್ನು ಉದ್ದೇಶಿಸಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಹೆಚ್.ಕೆ ಪಾಟೀಲ್ ಅವರು ನಡೆಸಿದ ಉಪಗ್ರಹ ಆಧಾರಿತ ಸಂವಾದ ಕಾರ್ಯಕ್ರಮದ ವೀಕ್ಷಣೆ ಶನಿವಾರ ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು.
ಈ ಸಂವಾದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ಜಿ.ಪಂ. ಸದಸ್ಯ ಜನಾರ್ಧನ ತೋನ್ಸೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ , ಜಿ.ಪಂ. ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್ , ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶೇಷಪ್ಪ, ವಿವಿಧ ಗ್ರಾಮ ಪಂಚಾಯತ್ ಗಳ ಸದಸ್ಯರು, ಪಿಡಿಓ ಗಳು ವೀಕ್ಷಿಸಿದರು.