ಮಹಿಳಾ ಸಬಲೀಕರಣಕ್ಕೆ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಉಡುಪಿ : ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ಧೇಶದಿಂದ , ಸ್ತ್ರೀಶಕ್ತಿ ಸಂಘಗಳನ್ನು ಬಲಗೊಳಿಸಲು ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ಶನಿವಾರ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 387 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಮೀನುಗಾರರ ಸಾಲ ಮನ್ನಾ ಕುರಿತಂತೆ ಸ್ಪಷ್ಟ ಸರಕಾರಿ ಆದೇಶವಿಲ್ಲದ ಕಾರಣ ಇದುವರೆವಿಗೂ ಈ ಪ್ರಯೋಜನ ಮೀನುಗಾರರಿಗೆ ದೊರೆಯದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಕೆಲವೇ ದಿನಗಳಲ್ಲಿ ಉಡುಪಿ ಜಿಲ್ಲೆಯ 20197 ಮೀನುಗಾರರ 55 ಕೋಟಿ ರೂ ಸಾಲ ಸಂಪೂರ್ಣ ಮನ್ನಾ ಆಗಲಿದ್ದು, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.
ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೆತ್ರವನ್ನಾಗಿ ಅಭಿವೃದ್ದಿಪಡಿಸುವ ಉದ್ದೇಶದಿಂದ ನಡೆಯುತ್ತಿರುವ 387 ಕೋಟ ರೂ ಮೊತ್ತದ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಕೂಡಿರುವುವಂತೆ ಅನುಷ್ಠಾನಗೊಳಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ತಮ್ಮ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳನ್ನು ನಿರ್ಮಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದರು.
ಬೈಂದೂರು ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಅಭಿವೃದ್ದಿಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ವಿವರಿಸಿ, ಕ್ಷೇತ್ರದ ಸರ್ವಾಂಗೀಣ ಅಭಿವೃಧ್ದಿಗೆ ತಾನು ಬದ್ದನಾಗಿದ್ದು, ಕ್ಷೇತ್ರದ ಜನತೆಗೆ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಾಗುತ್ತಿದ್ದು , ಮೀನುಗಾರಿಕಾ ರಸ್ತೆಗಳ ಅಭಿವೃದ್ದಿ, ಶಾಲೆಗಳ ದುರಸ್ತಿ ಮತ್ತು ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದು ಹೇಳಿದರು.
ವಿವಿಧ ಜನಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ವಾಗತಿಸಿದರು.