ರಾಷ್ಟ್ರೀಯ ಮತದಾರರ ದಿನಾಚರಣೆ : ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಮಂಗಳೂರು : ಜನವರಿ 25 ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು ಬುಧವಾರ ನಡೆಯಿತು.
ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸುವುದು, ಅವರು ಚುನವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಮತದಾನ ಕುರಿತು ಪ್ರಬಂಧ ಸ್ಪರ್ಧೆ, ಪೋಸ್ಟರ್ ಹಾಗೂ ಆಕೃತಿ ರಚನೆ ಕುರಿತು ಸ್ಪರ್ಧೆಗಳು ನಡೆಯಿತು. ಈಗಾಗಲೇ ಶಾಲಾ ಕಾಲೇಜು ಹಂತದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಪ್ರೌಢಶಾಲಾ ವಿದ್ಯಾರ್ಥಿಗಳ ಸ್ಪರ್ಧೆಯು ಬಲ್ಮಠ ಮಹಿಳಾ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳ ಸ್ಪರ್ಧೆಯು ಅತ್ತಾವರ ಮಧುಸೂದನ ಕುಶೆ ಕಾಲೇಜಿನಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳ ಸ್ಫರ್ಧೆಯು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಸ್ಟ್ರೀಟ್ ಇಲ್ಲಿ ನಡೆಯಿತು.
ಜಿಲ್ಲಾ ಮಟ್ಟದ ವಿಜೇತ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಫರ್ಧಿಸುವ ಅರ್ಹತೆ ಪಡೆಯಲಿದ್ದಾರೆ. ಚುನಾವಣಾ ಆಯೋಗವು ಮತದಾರರಲ್ಲಿ ಜಾಗೃತಿ ಮೂಡಿಸಲು ರಚಿಸಿರುವ ದ.ಕ.ಜಿಲ್ಲಾ ಸ್ವೀಪ್ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಲಾಗಿದ್ದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಮ್ ಆರ್ ರವಿ ಅವರು ಮೇಲುಸ್ತುವಾರಿಯನ್ನು ವಹಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಗಳು ಸ್ಪರ್ಧೆಯನ್ನು ಏರ್ಪಡಿಸಿತ್ತು.