ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ

Spread the love

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ

ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ 2 ಮಂದಿಯನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ ಕೂಳೂರು ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಗುಲ್ಬರ್ಗಾ ಅಜಾದ್ ಪುರ ಶೇಕ್ ಸಿಕಂದರ್(22), ಮತ್ತು ಕಾವೂರು ನಿವಾಸಿ ಮೊಹಮ್ಮದ್ ತೌಫೀಕ್(29) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ರೂ. 1,15,000/- ಮೌಲ್ಯದ 23 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ ಗಳು, ಸುಝುಕಿ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,10,000/- ಆಗಬಹುದು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಶೇಕ್ ಸಿಕಂದರ್ ಎಂಬಾತನು ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಿಂದ ಖರೀದಿಸಿಕೊಂಡು ಗುಲ್ಬರ್ಗದಿಂದ ಬಸ್ಸಿನಲ್ಲಿ ಮಂಗಳೂರಿಗೆ ಬಂದು ಇನ್ನೋರ್ವ ಆರೋಪಿ ಮೊಹಮ್ಮದ್ ತೌಫೀಕ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದು, ಮೊಹಮ್ಮದ್ ತೌಫೀಕ್ ನು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವುದಾಗಿದೆ. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಶೇಖ್ ಸಿಕಂದರ್ ಎಂಬಾತನ ವಿರುದ್ಧ ಈ ಹಿಂದೆ ಗುಲ್ಬರ್ಗದ ರೋಜಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಶರಣಪ್ಪ ಭಂಡಾರಿ, ಎಎಸ್ಐ ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


Spread the love
Subscribe
Notify of

0 Comments
Inline Feedbacks
View all comments