ಹಾಸನ ಜಿಲ್ಲಾಧಿಕಾರಿ ಅಕ್ರಮ್ ಪಾಷ ದಿಢೀರ್ ವರ್ಗ; ನೂತನ ಡಿಸಿಯಾಗಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನೇಮಕ
ಹಾಸನ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿರುವ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಾಸನದ ನೂತನ ಡಿಸಿಯಾಗಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಂಪಾಷಾ ಅವರು ಫೆಬ್ರವರಿ 22 ರಂದು ಹಾಸನಕ್ಕೆ ವರ್ಗಗೊಂಡು ಆಗಮಿಸಿದ್ದರು. ಇದೀಗ ಒಂದು ತಿಂಗಳ ಅವಧಿಯಲ್ಲೇ ಪಾಷಾರನ್ನು ಕೂಡ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಅವರ ಸ್ಥಾನಕ್ಕೆ ಪಾಷಾ ಅವರು ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು.
ಬಿಜೆಪಿ ಶಾಸಕ ಪ್ರೀತಂಗೌಡ ಚುನಾವಣಾ ಆಯೋಗಕ್ಕೆ ದೂರು ನೀಡಿ ಡಿಸಿ ಅವರನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದರು. ಈ ದೂರನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದೆ. ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಪ್ರಿಯಾಂಕಾ ಮೇರಿ ಕಾರ್ಯನಿರ್ವಹಿಸಿದ್ದರು.
ಇದರೊಂದಿಗೆ ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಮತ್ತು ಪುನರ್ವಸತಿ ಕಮಿಷನರ್ ಆಗಿದ್ದ ಉಜ್ವಲ್ ಕುಮಾರ್ ಘೋಷ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಕಮಿಷನರ್ ಆಗಿದ್ದ ಎಂ. ಕನಗವಳ್ಳಿ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.